ಬೆಂಗಳೂರು, ಏ.13 www.bengaluruwire.com: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ನಾಳೆ (ಏಪ್ರಿಲ್ 14) ವಿಶೇಷ ಆಚರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಜಯಕರ ಎಸ್.ಎಂ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಖ್ಯಾತ ಬರಹಗಾರರಾದ ಡಾ. ಬಂಜೆಗೆರೆ ಜಯಪ್ರಕಾಶ್ ಅವರು ಭಾಗವಹಿಸಿ ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ಬೆಳಕು ಚೆಲ್ಲಲಿದ್ದಾರೆ.
ವೈವಿಧ್ಯಮಯ ಕಾರ್ಯಕ್ರಮಗಳ ಹಬ್ಬ:
ಕೇವಲ ವೇದಿಕೆ ಕಾರ್ಯಕ್ರಮಕ್ಕೆ ಸೀಮಿತವಾಗದೆ, ಈ ಬಾರಿ ವಿದ್ಯಾರ್ಥಿಗಳಿಗಾಗಿ ಮತ್ತು ಸಾರ್ವಜನಿಕರಿಗಾಗಿ ಹಲವು ಅರ್ಥಪೂರ್ಣ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

* ಎರಡು ದಿನಗಳ ಕಾಲ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.
* ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
* ಸಾರ್ವಜನಿಕ ಹಿತದೃಷ್ಟಿಯಿಂದ ರಕ್ತದಾನ ಶಿಬಿರ ನಡೆಯಲಿದೆ.
* ಪರಿಸರ ಕಾಳಜಿಯೊಂದಿಗೆ ‘ಜ್ಞಾನಭಾರತಿ ಸ್ವಚ್ಛತಾ ಅಭಿಯಾನ’ಕ್ಕೆ ಚಾಲನೆ ನೀಡಲಾಗುವುದು.
ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವೆ ಕೆ.ಟಿ. ಶಾಂತಲಾ, ಮೌಲ್ಯಮಾಪನ ಕುಲಸಚಿವ ಪ್ರೊ. ಸಿ.ಎಸ್. ಕರಿಗಾರ್, ವಿತ್ತಾಧಿಕಾರಿ ಡಾ. ಸುನೀತಾ ಎಂ, ಎಸ್‌ಸಿ/ಎಸ್‌ಟಿ ಘಟಕದ ವಿಶೇಷಾಧಿಕಾರಿ ಪ್ರೊ. ಜಿ. ಕೃಷ್ಣಮೂರ್ತಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕ ಪ್ರೊ. ಪಿ.ಸಿ. ನಾಗೇಶ್ ಹಾಗೂ ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಸಿ. ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.























