ಬೆಂಗಳೂರು, ಜೂ.05 www.bengaluruwire.com: ರಾಜ್ಯದ ಮುಖ್ಯಮಂತ್ರಿಯಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ವಿದ್ಯಾರ್ಥಿ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ತಮ್ಮ ಚೊಚ್ಚಲ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಿದಂತೆ, ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’ ಯೋಜನೆಯನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯದಾದ್ಯಂತ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಮತ್ತು ಆರ್ಥಿಕ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಅದರಂತೆ ಇದೀಗ ರಾಜ್ಯ ಸರ್ಕಾರವು ಯೋಜನೆಗೆ ತಾತ್ವಿಕ ಅನುಮೋದನೆ ನೀಡಿ ಆದೇಶ ಪ್ರಕಟಿಸಿದೆ.
ನಾಲ್ಕು ಸಾರಿಗೆ ನಿಗಮಗಳಲ್ಲೂ ಉಚಿತ ಪ್ರಯಾಣ:

ಸರ್ಕಾರದ ಆದೇಶದ ಪ್ರಕಾರ, ರಾಜ್ಯದ ಪ್ರಮುಖ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (KKRTC) ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರಿಂದ ಗ್ರಾಮೀಣ ಹಾಗೂ ನಗರ ಪ್ರದೇಶದ ಎಲ್ಲಾ ವಿದ್ಯಾರ್ಥಿಗಳಿಗೂ ತಾರತಮ್ಯವಿಲ್ಲದೆ ಅನುಕೂಲವಾಗಲಿದೆ.
ಶೀಘ್ರದಲ್ಲೇ ಪ್ರತ್ಯೇಕ ಮಾರ್ಗಸೂಚಿ ಪ್ರಕಟ:
ಈ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ, ಅಗತ್ಯ ದಾಖಲಾತಿಗಳು ಹಾಗೂ ನಿಬಂಧನೆಗಳನ್ನೊಳಗೊಂಡ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಅವರು ತಮ್ಮ ಅಧಿಕೃತ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಹೊಸ ಮಾರ್ಗಸೂಚಿ ಪ್ರಕಟವಾದ ತಕ್ಷಣವೇ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಲು ಸಾಧ್ಯವಾಗಲಿದೆ.

















