ಬೆಂಗಳೂರು, ಜು.11 www.bengaluruwire.com: ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಸಿ. ಶಿವರಾಜು ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.
ಜ್ಞಾನಭಾರತಿ ಆವರಣದಲ್ಲಿರುವ ವಿಶ್ವವಿದ್ಯಾಲಯದ ಆಡಳಿತ ಕಚೇರಿಯಲ್ಲಿ ಅವರು ಔಪಚಾರಿಕವಾಗಿ ತಮ್ಮ ಹುದ್ದೆಯ ಜವಾಬ್ದಾರಿಯನ್ನು ಸ್ವೀಕರಿಸಿದರು.
ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರೊ. ಸಿ. ಶಿವರಾಜು ಅವರನ್ನು ನೂತನ ಕುಲಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಈ ಹಿಂದೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ (ಮೌಲ್ಯಮಾಪನ) ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಅವರು ಸೇವೆ ಸಲ್ಲಿಸಿದ ಅಪಾರ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಅನುಭವವನ್ನು ಹೊಂದಿದ್ದಾರೆ.
ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ:

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರೊ. ಸಿ. ಶಿವರಾಜು, “ಬೆಂಗಳೂರು ವಿಶ್ವವಿದ್ಯಾಲಯವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಮನ್ನಣೆ ಗಳಿಸಿದೆ. ಮುಂಬರುವ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿ, ವಿದ್ಯಾರ್ಥಿ ಸ್ನೇಹಿ ವಾತಾವರಣ ನಿರ್ಮಾಣ ಮತ್ತು ನೌಕರರ ಪ್ರಗತಿಗೆ ಭವಿಷ್ಯದಲ್ಲಿ ಮತ್ತಷ್ಟು ಶ್ರಮಿಸುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರೊ. ಸಿ. ಶಿವರಾಜು ಅವರ ಹಿನ್ನೆಲೆ:
1994ರಲ್ಲಿ ಬೆಂಗಳೂರು ವಿವಿಯ ಸಂಸ್ಕೃತ ವಿಭಾಗದಲ್ಲಿ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭ. ಸಂಸ್ಕೃತ ಸಾಹಿತ್ಯ ಮತ್ತು ಅರ್ಥಶಾಸ್ತ್ರ ವಿಷಯಗಳಲ್ಲಿ ವಿಶೇಷ ಪರಿಣತಿ. ವಿವಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕೋಶದ ವಿಶೇಷಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅನುಭವ.






















