ಬೆಂಗಳೂರು/ನವದೆಹಲಿ, ಜು.26 www.bengaluruwire.com: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯು ಈ ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ತಮ್ಮ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಮಹತ್ವದ ಸುಳಿವು ನೀಡಿದ್ದಾರೆ.
ಈ ವಾರವೇ ಸಂಪುಟ ವಿಸ್ತರಣೆ ಪೂರ್ಣ:
ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಗುಮುಖದಲ್ಲೇ ಉತ್ತರಿಸಿದ ಸಿಎಂ ಡಿ.ಕೆ. ಶಿವಕುಮಾರ್, “ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು (ಮಾಧ್ಯಮಗಳು) ಆತುರದಲ್ಲಿದ್ದೀರಿ. ಈ ವಾರದೊಳಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಸಂಪೂರ್ಣಗೊಳ್ಳಲಿದೆ” ಎಂದು ಖಚಿತಪಡಿಸಿದರು. ಈ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

ಸಂಸದರೊಂದಿಗೆ ಮಹತ್ವದ ಚರ್ಚೆ ಹಾಗೂ ಸರ್ವಪಕ್ಷ ಸಭೆ:
ದೆಹಲಿ ಪ್ರವಾಸದ ಉದ್ದೇಶವನ್ನು ವಿವರಿಸಿದ ಅವರು, “ಇಂದು ದೆಹಲಿಯಲ್ಲಿ ನಮ್ಮ ರಾಜ್ಯದ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದೇನೆ. ಅವರಿಗೆ ರಾಜ್ಯದ ಪ್ರಸ್ತುತ ಬರ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು ಹಾಗೂ ಕೃಷ್ಣಾ ಸೇರಿದಂತೆ ಪ್ರಮುಖ ನೀರಾವರಿ ಮತ್ತು ಜಲ ಸಂಪನ್ಮೂಲ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ” ಎಂದರು.
”ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ರಾಜ್ಯದ ಹಿತದೃಷ್ಟಿಯಿಂದ ಯಾವ ವಿಚಾರದಲ್ಲಿ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ದೆಹಲಿಗೆ ತೆರಳುತ್ತಿದ್ದೇನೆ. ದೆಹಲಿ ಭೇಟಿಯ ನಂತರ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಸರ್ವಪಕ್ಷ ಸಭೆಯನ್ನು ಕರೆಯಲಾಗುವುದು. ಅಲ್ಲದೆ, ರಾಜ್ಯದ ಹಿರಿಯ ನಾಯಕರ ಜೊತೆಗೂ ಈ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಾಗುವುದು” ಎಂದು ಅವರು ಮಾಹಿತಿ ನೀಡಿದರು.
ದೆಹಲಿಯಲ್ಲಿ ಅಧಿಕಾರಿಗಳೊಂದಿಗೆ ಜಲ ಸಂಪನ್ಮೂಲ ವಿಷಯ ಕುರಿತು ಸಮಾಲೋಚನೆ:
ಮೇಕೆದಾಟು, ಮಹದಾಯಿ ಸೇರಿದಂತೆ ರಾಜ್ಯದ ಪ್ರಮುಖ ಕುಡಿಯುವ ನೀರಿನ ಯೋಜನೆಗಳು, ಜಲ ಸಂಪನ್ಮೂಲ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ಹಾಗೂ ರಾಜ್ಯದ ಜಲಾಶಯಗಳಲ್ಲಿನ ನೀರಿನ ಮಟ್ಟದ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ದೆಹಲಿಯ ಕರ್ನಾಟಕ ಭವನದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.
ಕಾನೂನು ಮತ್ತು ಜಲ ಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ನಡೆದ ಈ ಮಹತ್ವದ ಸಮಾಲೋಚನಾ ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ, ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಕರ್ನಾಟಕ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಎಂ ಕಾರ್ಯದರ್ಶಿ ನಕುಲ್ ಹಾಗೂ ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.




















