ಬೆಂಗಳೂರು, ಆ.05 www.bengaluruwire.com: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ (Jnanabharathi Campus) ಇತ್ತೀಚೆಗೆ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮಾನಸ (23) ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ (ಆಗಸ್ಟ್ 5) ದುರಂತ ಅಂತ್ಯ ಕಂಡಿದ್ದಾರೆ.
ದೃಶ್ಯಕಲಾ ವಿಭಾಗದಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದ ಮಾನಸ ಅವರ ಸಾವಿನಿಂದಾಗಿ ಕ್ಯಾಂಪಸ್‌ನಲ್ಲಿ ಶೋಕ ಮಡುಗಟ್ಟಿದ್ದು, ಸಾರ್ವಜನಿಕ ವಾಹನಗಳ ಅನಿಯಂತ್ರಿತ ಸಂಚಾರದ ವಿರುದ್ಧ ವಿದ್ಯಾರ್ಥಿ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಘಟನೆಯ ಹಿನ್ನೆಲೆ:
ಕಳೆದ ಜುಲೈ 30ರಂದು ವಿಶ್ವವಿದ್ಯಾಲಯದ ಆಡಳಿತ ಕಚೇರಿಯಿಂದ ನಾಗರಬಾವಿ ವೃತ್ತದ ಕಡೆಗೆ ತೆರಳುತ್ತಿದ್ದ ಆಟೋವೊಂದು, ಗಾಂಧಿ ಮಾರ್ಗ ರಸ್ತೆಯನ್ನು ದಾಟುತ್ತಿದ್ದ ವೇಳೆ ವಿದ್ಯಾರ್ಥಿನಿ ಮಾನಸ ಅವರಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿತ್ತು. ಪರಿಣಾಮ ತಲೆ ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಸ್ವರೂಪದ ಪೆಟ್ಟಾಗಿತ್ತು.

ಅಪಘಾತದ ತಕ್ಷಣವೇ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ ಮೇಲ್ದರ್ಜೆಯ ಚಿಕಿತ್ಸೆಗಾಗಿ ಪೋಷಕರು ಮಾನಸ ಅವರನ್ನು ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಆದರೆ, ವೈದ್ಯರ ಸತತ ಪ್ರಯತ್ನದ ಹೊರತಾಗಿಯೂ ಇಂದು ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ.
ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಲು ಒತ್ತಾಯ:
ಈ ಕರುಣಾಜನಕ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಕ್ಯಾಂಪಸ್ ಒಳಗೆ ಸಾರ್ವಜನಿಕ ವಾಹನಗಳ ಓಡಾಟವನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ ಬಿಗಿಪಟ್ಟು ಹಿಡಿದಿದ್ದಾರೆ.
ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ಶೀಘ್ರ ಸೂಕ್ತ ಕ್ರಮ:
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ. ಶಿವರಾಜು ಅವರು, “ಗಾಂಧಿಮಾರ್ಗ ರಸ್ತೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ವಿಧಿಸುವ ಕುರಿತು ರಾಜ್ಯ ಸರ್ಕಾರದ ಮಟ್ಟದಲ್ಲಿ ಹಾಗೂ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ವಿಶ್ವವಿದ್ಯಾಲಯದ ವತಿಯಿಂದ ಪರಿಹಾರ ನೀಡಲಾಗುವುದು. ಅಲ್ಲದೆ, ಇಂತಹ ದುರ್ಘಟನೆಗಳಿಂದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ತಕ್ಷಣದಿಂದಲೇ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗುವುದು,” ಎಂದು ಭರವಸೆ ನೀಡಿದರು.
ಬೆಂಗಳೂರು ವಿಶ್ವವಿದ್ಯಾಲಯವು 47 ವಿವಿಧ ವಿಭಾಗಗಳನ್ನು ಹೊಂದಿದ್ದು, 6,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 1,000ಕ್ಕೂ ಅಧಿಕ ಬೋಧಕ/ಬೋಧಕೇತರ ಸಿಬ್ಬಂದಿ ಇಲ್ಲಿ ನಿತ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಆಡಳಿತ ಕಚೇರಿಯಿಂದ ನಾಗರಬಾವಿ ವೃತ್ತದವರೆಗೆ ಸಂಪರ್ಕಿಸುವ ಗಾಂಧಿ ಮಾರ್ಗ ರಸ್ತೆಯು ಕಿರಿದಾಗಿದ್ದರೂ, ಸಾರ್ವಜನಿಕ ವಾಹನಗಳ ದಟ್ಟಣೆ ಮಿತಿಮೀರಿದೆ. ಇದರಿಂದಾಗಿ ವಿದ್ಯಾರ್ಥಿಗಳು ರಸ್ತೆ ದಾಟಲು ಹಾಗೂ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ತೆರಳಲು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ಮರುಕಳಿಸುತ್ತಿರುವ ದುರಂತಗಳು:
ಜ್ಞಾನಭಾರತಿ ಆವರಣದಲ್ಲಿ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2022ರಲ್ಲೂ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯೊಬ್ಬರು ಬಿಎಂಟಿಸಿ ಬಸ್‌ಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದರು. ಇಂತಹ ಭೀಕರ ಘಟನೆಗಳು ಮರುಕಳಿಸುತ್ತಲೇ ಇದ್ದರೂ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, ವಿವಿ ಆವರಣದಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ, ಸ್ಪೀಡ್ ಬ್ರೇಕರ್ ಹಾಗೂ ಕಟ್ಟುನಿಟ್ಟಿನ ಭದ್ರತಾ ನಿಯಂತ್ರಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.




















