ಬೆಂಗಳೂರು, ನ.20 www.bengaluruwire.com: ರಾಜ್ಯದ ಬಡವರಿಗೆ ಶಾಶ್ವತ ಸೂರು ಕಲ್ಪಿಸುವ ನಿಟ್ಟಿನಲ್ಲಿ 15 ಲಕ್ಷ ನಿವೇಶನಗಳನ್ನು ವಿತರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ವಿಶೇಷ ಆದ್ಯತೆ ನೀಡಬೇಕು ಹಾಗೂ ಪಿಂಚಣಿ ಸೌಲಭ್ಯದಿಂದ ಹೊರಗುಳಿದಿರುವ 23 ಲಕ್ಷ ಜನರ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳು ಕೇವಲ ಪ್ರಗತಿ ವರದಿಗಳಿಗೆ ಸೀಮಿತವಾಗದೆ, ನಿಗದಿತ ಕಾಲಮಿತಿಯೊಳಗೆ ನೈಜ ಫಲಾನುಭವಿಗಳಿಗೆ ತಲುಪಬೇಕು ಎಂದು ಅವರು ತಾಕೀತು ಮಾಡಿದರು.
15 ಲಕ್ಷ ನಿವೇಶನ ವಿತರಣೆಗೆ 24 ಸಾವಿರ ಎಕರೆ ಭೂಮಿ ಗುರುತು: ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರೂ ರಾಜ್ಯದ ಬಡವರು ಇಂದಿಗೂ ಗುಡಿಸಲುಗಳಲ್ಲಿ ವಾಸಿಸುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಡಿಸಿಎಂ ವಿಷಾದ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳ ಆಶಯದಂತೆ ಬಡವರಿಗೆ 15 ಲಕ್ಷ ನಿವೇಶನಗಳನ್ನು ಒದಗಿಸುವ ಯೋಜನೆಯನ್ನು ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿ ಪರಿಗಣಿಸಿ ಅನುಷ್ಠಾನಗೊಳಿಸಬೇಕು. ಈ ಉದ್ದೇಶಕ್ಕಾಗಿ ಈಗಾಗಲೇ ಸುಮಾರು 24 ಸಾವಿರ ಎಕರೆ ಜಮೀನನ್ನು ಗುರುತಿಸಲಾಗಿದೆ. ಅರ್ಹ ಫಲಾನುಭವಿಗಳ ಆಯ್ಕೆ, ಭೂಮಿಗೆ ಸಂಬಂಧಿಸಿದ ತಾಂತ್ರಿಕ ಪ್ರಕ್ರಿಯೆಗಳು ಹಾಗೂ ನಿವೇಶನ ಹಂಚಿಕೆಯಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ನಿರ್ದೇಶನ ನೀಡಿದರು.
23 ಲಕ್ಷ ಪಿಂಚಣಿ ಫಲಾನುಭವಿಗಳ ಅರ್ಹತೆ ಪರಿಶೀಲನೆ: ರಾಜ್ಯದಲ್ಲಿ ಪಿಂಚಣಿ ಸೌಲಭ್ಯಕ್ಕೆ ಒಳಪಡದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳು ಆರಂಭಿಕ ಹಂತದಲ್ಲೇ ಹೆಚ್ಚಿನ ಎಚ್ಚರಿಕೆ ವಹಿಸಬೇಕಿತ್ತು ಎಂದು ಪರಮೇಶ್ವರ ಅವರು ಅಭಿಪ್ರಾಯಪಟ್ಟರು. ನಿಜವಾದ ಅರ್ಹರು ಪಿಂಚಣಿ ಸೌಲಭ್ಯದಿಂದ ವಂಚಿತರಾಗದಂತೆ ಹಾಗೂ ಅನರ್ಹರಿಗೆ ಸರ್ಕಾರದ ಹಣ ಪೋಲಾಗದಂತೆ ಪಾರದರ್ಶಕವಾಗಿ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ಬರ ಪರಿಹಾರ ಹಾಗೂ ಮೇವಿನ ವ್ಯವಸ್ಥೆಗೆ ಆದ್ಯತೆ: ಸೂಪರ್ ಎಲ್‌ನೀನೋ ಪರಿಣಾಮದಿಂದ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಹಿಂಗಾರು ಮಳೆಯೂ ಕೈಕೊಟ್ಟಿದೆ. ಬರಪೀಡಿತ ಪ್ರತಿ ಅರ್ಹ ರೈತರಿಗೆ ₹5,000 ಪರಿಹಾರ ನೀಡಲು ಸರ್ಕಾರ ನಿರ್ಧರಿಸಿ ಎರಡು ತಿಂಗಳು ಕಳೆದರೂ ಕೆಲವು ಜಿಲ್ಲೆಗಳಲ್ಲಿ ರೈತರ ಖಾತೆಗೆ ಹಣ ಜಮೆಯಾಗದಿರುವುದಕ್ಕೆ ಡಿಸಿಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ತಕ್ಷಣವೇ ಪರಿಹಾರ ವಿತರಣೆ ಪೂರ್ಣಗೊಳಿಸಬೇಕು, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು. ಮೇವಿನ ಬೀಜದ ಕಿಟ್‌ಗಳ ವಿತರಣೆಗೆ ಹೆಚ್ಚುವರಿಯಾಗಿ ₹30 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ವಿಪತ್ತು ನಿರ್ವಹಣಾ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೃಷಿ ಇಲಾಖೆ ಕಾರ್ಯದರ್ಶಿ ತ್ರಿಲೋಕ್‌ಚಂದ್ರ, ಕಂದಾಯ ಆಯುಕ್ತೆ ಮೀನಾ ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


















