ನವದೆಹಲಿ, ಏ.04 www.bengaluruwire.com : ನ್ಯಾಯಾಂಗದ ಪಾರದರ್ಶಕತೆ ಮತ್ತು ನಂಬಿಕೆಯನ್ನು ಹೆಚ್ಚಿಸುವ ಸಲುವಾಗಿ, ಸುಪ್ರೀಂ ಕೋರ್ಟ್ನ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ನ್ಯಾಯಮೂರ್ತಿಗಳ ಸಭೆಯಲ್ಲಿ ನಿರ್ಧರಿಸಿದ್ದಾರೆ.
ಈ ಮಾಹಿತಿಯನ್ನು ಸುಪ್ರೀಂ ಕೋರ್ಟ್ನ ಅಧಿಕೃತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗುವುದು ಎಂದು ತಿಳಿದುಬಂದಿದೆ. ನ್ಯಾಯಮೂರ್ತಿಗಳ ಆಸ್ತಿ ವಿವರ ಬಹಿರಂಗಪಡಿಸಬೇಕು ಎಂಬುದು ಕಡ್ಡಾಯವಲ್ಲ, ಆದರೆ ಇದು ಸಂಪೂರ್ಣವಾಗಿ ಸ್ವಯಂಪ್ರೇರಿತ ಪ್ರಕ್ರಿಯೆ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಇತ್ತೀಚೆಗೆ ದೆಹಲಿ ಹೈಕೋರ್ಟ್ನ ನ್ಯಾಯಾಧೀಶರೊಬ್ಬರ ಅಧಿಕೃತ ನಿವಾಸದಲ್ಲಿ ದೊಡ್ಡ ಮೊತ್ತದ ಹಣ ಪತ್ತೆಯಾದ ಪ್ರಕರಣವು ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತು. ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಈ ನಿರ್ಧಾರವು ಮಹತ್ವದ್ದಾಗಿದೆ.
ಇತ್ತೀಚೆಗೆ ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ಎಲ್ಲಾ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಭಾರತದ ಮುಖ್ಯ ನ್ಯಾಯಾಧೀಶರಿಗೆ ಸಲ್ಲಿಸಲು ಮತ್ತು ನಂತರ ಅದನ್ನು ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟಿಸಲು ಒಪ್ಪಿಕೊಂಡರು. ನ್ಯಾಯಾಧೀಶರ ಆಸ್ತಿ ಘೋಷಣೆಗಳನ್ನು ಪ್ರಕಟಿಸುವ ನಿರ್ದಿಷ್ಟ ವಿಧಾನಗಳನ್ನು ಮುಂದಿನ ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪ್ರಮಾಣವಚನ ಸ್ವೀಕರಿಸಿದ ತಕ್ಷಣವೇ ತಮ್ಮ ಆಸ್ತಿ ವಿವರಗಳನ್ನು ಸಿಜೆಐಗೆ ಸಲ್ಲಿಸಬೇಕು ಎಂಬ ನಿಯಮವಿದೆ. ಆದರೆ, ಈ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಕಡ್ಡಾಯ ನಿಯಮವಿರಲಿಲ್ಲ. ನ್ಯಾಯಾಧೀಶರ ಈ ನಿರ್ಧಾರವು ಸಾರ್ವಜನಿಕರಲ್ಲಿ ನ್ಯಾಯಾಂಗದ ಮೇಲಿನ ವಿಶ್ವಾಸವನ್ನು ಹೆಚ್ಚಿಸುವ ನಿರೀಕ್ಷೆಯಿದೆ.
ಇಂತಹ ನಿರ್ಧಾರವು ನ್ಯಾಯಾಂಗ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿದಂತೆ 30 ನ್ಯಾಯಮೂರ್ತಿಗಳು ಈತನಕ ತಮ್ಮ ಆಸ್ತಿ ವಿವರಗಳನ್ನು https://www.sci.gov.in/assets-of-judges ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದಾರೆ.






















