ಬೆಂಗಳೂರು, ಜೂ.6 www.bengaluruwire.com : ಸಿಲಿಕಾನ್ ಸಿಟಿಯಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ವಿಜಯೋತ್ಸವ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಕ್ಕೆ ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ, ಬೇಸರ ಮತ್ತು ಖಂಡನೆ ವ್ಯಕ್ತವಾಗಿದೆ.
ಗುರುವಾರ (ಜೂನ್ 5 ರಂದು) ನಡೆದ ಬೆಳವಣಿಗೆಯಲ್ಲಿ ಸರ್ಕಾರ ಕೈಗೊಂಡ ಈ ನಿರ್ಧಾರ ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ “ಕರಾಳ ದಿನ” ಎಂದು ಭಾಸ್ಕರ್ ರಾವ್ ತಮ್ಮ ಟ್ವಿಟ್ಟರ್ (X) ಖಾತೆಯಲ್ಲಿ ತೀವ್ರವಾಗಿ ಟೀಕಿಸಿದ್ದಾರೆ. “ರಾತ್ರಿಯಿಡೀ ನಗರದ ಸುರಕ್ಷತೆಗಾಗಿ ಅಹರ್ನಿಶಿ ದುಡಿದ ಅಧಿಕಾರಿಗಳಿಗೆ ಸಿಕ್ಕ ಬಹುಮಾನ ಅಮಾನತು,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನೇರ ಹೊಣೆಗಾರರು ಎಂದು ಆರೋಪಿಸಿದ ಭಾಸ್ಕರ್ ರಾವ್, ತಮ್ಮ ಆಡಳಿತಾತ್ಮಕ ವೈಫಲ್ಯಗಳನ್ನು ಮರೆಮಾಚಲು ಪೊಲೀಸರನ್ನು “ಗೂಬೆ”ಗಳನ್ನಾಗಿ ಬಳಸಲಾಗುತ್ತಿದೆ ಎಂದು ದೂರಿದ್ದಾರೆ.
ಅಲ್ಲದೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ “ಮರಣ ಮೆರವಣಿಗೆಯನ್ನು” ಸಂಘಟಿಸಿದರು ಎಂದು ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಐಪಿಎಲ್ ಚಾಂಪಿಯನ್ ಆರ್ ಸಿಬಿ ತಂಡದ ಆಟಗಾರರನ್ನು ಸನ್ಮಾನಿಸುವ ಕಾರಗಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ಸೇರಿದಂತೆ ರಾಜಕಾರಣಿಗಳ ಕುಟುಂಬಸ್ಥರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾರೆಡ್ಡಿ ಹಾಜರಿದ್ದ ಸಾಕಷ್ಟು ಫೊಟೊ ಹಾಗೂ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ಕಾಂಗ್ರೆಸ್ ನಾಯಕರ ಕುಟುಂಬದವರು ದುರ್ಘಟನೆ ನಡೆದ ಸಂದರ್ಭದಲ್ಲೂ ಆರ್ ಸಿಬಿ ಆಟಗಾರರ ಸನ್ಮಾನ ಸಮಾರಂಭದಲ್ಲಿ ನಿಂತು ಫೊಟೊಗೆ ಪೋಸ್ ಕೊಟ್ಟಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ, ಪೊಲೀಸ್ ಆಯುಕ್ತ ಬಿ. ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ ವಿಭಾಗ) ವಿಕಾಸ್ ಕುಮಾರ್ ವಿಕಾಸ್, ಡಿಸಿಪಿ (ಕೇಂದ್ರ ವಿಭಾಗ) ಶೇಖರ್ ಹೆಚ್. ಟೆಕ್ಕನ್ನವರ್, ಮತ್ತು ಕುಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಎ.ಕೆ. ಗಿರೀಶ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸರ್ಕಾರವು ಘಟನೆಯ ಕುರಿತು ಸಿಐಡಿ ತನಿಖೆ ಮತ್ತು ನಿವೃತ್ತ ನ್ಯಾಯಾಧೀಶ ನ್ಯಾ.ಡಿಕುನ್ಹಾ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಗುರುವಾರ ಆದೇಶಿಸಿದೆ.





















