ನವದೆಹಲಿ, ನ.11 www.bengaluruwire.com : ದೆಹಲಿಯ ರೆಡ್ ಫೋರ್ಟ್ ಸಮೀಪ ನಡೆದ ಸ್ಫೋಟದ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ನವೆಂಬರ್ 11) ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯನ್ನು ಕರೆದಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಮತ್ತು ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಬಳಿಕ ಗೃಹ ಸಚಿವರು ಈ ಸಭೆಯನ್ನು ಕರೆದಿದ್ದಾರೆ. ಕೇಂದ್ರ ಗೃಹ ಕಾರ್ಯದರ್ಶಿ, ಐಬಿ ನಿರ್ದೇಶಕರು, ದೆಹಲಿ ಪೊಲೀಸ್ ಆಯುಕ್ತರು ಮತ್ತು ಡಿಜಿ ಎನ್‌ಐಎ ಅವರು ಸಭೆಯಲ್ಲಿ ಭಾಗವಹಿಸಲಿದ್ದು, ಡಿಜಿಪಿ ಜಮ್ಮು ಮತ್ತು ಕಾಶ್ಮೀರ ಅವರು ವರ್ಚುಯಲ್ ಮೂಲಕ ಸಭೆಯಲ್ಲಿ ಭಾಗವಹಿಸ ಲಿದ್ದಾರೆ.
ರೆಡ್ ಫೋರ್ಟ್ ಬಳಿ ನಡೆದ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವರು, ದೆಹಲಿ ಪೊಲೀಸ್ ಆಯುಕ್ತರು ಮತ್ತು ಇತರ ಹಿರಿಯ ಅಧಿಕಾರಿಗಳಿಂದ ವಿವರಗಳನ್ನು ಪಡೆದರು. ಬಳಿಕ, ಲೋಕ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿಯಾಗಿ ವೈದ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.
ಈ ಬಗ್ಗೆ ಮಾತನಾಡಿದ ಗೃಹ ಸಚಿವರು, ಪ್ರಕರಣದ ಸಂಪೂರ್ಣ ತನಿಖೆಯನ್ನು ಪ್ರತಿ ಕೋನದಿಂದಲೂ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಘಟನೆಯ ಮಾಹಿತಿ ಬಂದ ಕೂಡಲೇ ದೆಹಲಿ ಪೊಲೀಸ್ ವಿಶೇಷ ಸೆಲ್, ಕ್ರೈಂ ಬ್ರಾಂಚ್, ಎನ್‌ಐಎ (NIA), ಎನ್‌ಎಸ್‌ಜಿ (NSG) ಮತ್ತು ಎಫ್‌ಎಸ್‌ಎಲ್ (FSL) ತಂಡಗಳು ಸ್ಥಳಕ್ಕೆ ತಲುಪಿದ್ದು, ಸ್ಫೋಟದ ಕಾರಣವನ್ನು ಕಂಡುಹಿಡಿಯಲು ನಮ್ಮ ಸಂಸ್ಥೆಗಳು ಶ್ರಮಿಸುತ್ತಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸ್ಥಳದಿಂದ ಸಂಗ್ರಹಿಸಿದ ಪುರಾವೆಗಳ ವಿಶ್ಲೇಷಣೆ ಮುಗಿಯುವವರೆಗೆ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅವರು ಹೇಳಿದರು.




















