ಬೆಂಗಳೂರು, ಜ.01 www.bengaluruwire.com : “ಸರ್ಕಾರದ ಸೇವೆಗಳು ಜನಸಾಮಾನ್ಯರಿಗೆ ತಲುಪುವಲ್ಲಿ ವಿಳಂಬವಾಗಬಾರದು. ವಿಳಂಬ ನೀತಿಯನ್ನು ಅನುಸರಿಸುವುದು ಒಂದು ರೀತಿಯಲ್ಲಿ ಅಪರಾಧವೇ ಸರಿ. ಅಧಿಕಾರಿಗಳು ಜಾತ್ಯತೀತವಾಗಿ ಹಾಗೂ ಮಾನವೀಯ ನೆಲೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕರೆ ನೀಡಿದರು.
ವಿಧಾನಸೌಧದಲ್ಲಿ ಗುರುವಾರ (ಜ.01) ಹೊಸ ವರ್ಷದ ಪ್ರಯುಕ್ತ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡ ಬಳಿಕ ಅವರು ಮಾತನಾಡಿದರು. 2026ನೇ ಹೊಸ ವರ್ಷವು ರಾಜ್ಯದ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ ಸಿಎಂ, ಆಡಳಿತ ಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದರು.
ರೈತರ ಮೊಗದಲ್ಲಿ ನೆಮ್ಮದಿ :
ಕಳೆದ 2025ರಲ್ಲಿ ಉತ್ತಮ ಮಳೆಯಾಗಿದ್ದರೂ, ಸುಮಾರು 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿತ್ತು. ಸಂಕಷ್ಟದ ಸಮಯದಲ್ಲಿ ರೈತರಿಗೆ ನೆರವಾಗುವುದು ಸರ್ಕಾರದ ಆದ್ಯ ಕರ್ತವ್ಯ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅಡಿಯಲ್ಲಿ ಪ್ರತಿ ಹೆಕ್ಟೇರ್‌ಗೆ 8,500 ರೂ. ಪರಿಹಾರ ನೀಡಲಾಗಿದ್ದು, ಇದರಿಂದ ರೈತರು ತುಸು ನೆಮ್ಮದಿ ಕಾಣುವಂತಾಗಿದೆ. ಅನ್ನದಾತರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದು ಎಂದು ಸಿಎಂ ಸ್ಮರಿಸಿದರು.

ಸಮಸಮಾಜ ನಿರ್ಮಾಣ ನಮ್ಮ ಗುರಿ:
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಲದು, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲರಿಗೂ ಸಮಾನ ಅವಕಾಶ ಮತ್ತು ನ್ಯಾಯ ಒದಗಿಸುವ ಮೂಲಕ ‘ಸಮಸಮಾಜ’ ನಿರ್ಮಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.

ಪೊಲೀಸ್ ಇಲಾಖೆಗೆ ಶ್ಲಾಘನೆ:
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ರಾಜ್ಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಮುಖ್ಯಮಂತ್ರಿಗಳು ಮುಕ್ತಕಂಠದಿಂದ ಶ್ಲಾಘಿಸಿದರು. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಸಂಭ್ರಮಾಚರಣೆ ಶಾಂತಿಯುತವಾಗಿ ಜರುಗಲು ಪೊಲೀಸರ ಶ್ರಮವೇ ಕಾರಣ ಎಂದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಸೇರಿದಂತೆ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಸೇರಿದಂತೆ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು.
ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ 2026 ನೇ ಸಾಲಿನ ಕ್ಯಾಲೆಂಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದಂತಹ ನಜೀರ್ ಅಹಮದ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಚಿವಾಲಯ ಅಧಿಕಾರಿಗಳು ಹಾಗೂ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ, ಉಪಾಧ್ಯಕ್ಷರಾದ ಹರ್ಷ, ಪ್ರಧಾನ ಕಾರ್ಯದರ್ಶಿ ಅಭಿಜಿತ್ ಮತ್ತಿರರು ಉಪಸ್ಥಿತರಿದ್ದರು.
“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.




















