ಬೆಂಗಳೂರು, ಮೇ.30 www.bengaluruwire.com: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ, ಅವರು ಇಂದು (ಮೇ 30) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅಧಿಕೃತವಾಗಿ ಹಕ್ಕು ಮಂಡಿಸಿದರು.
ಡಿ.ಕೆ. ಶಿವಕುಮಾರ್ ಅವರ ಮನವಿಯನ್ನು ಪುರಸ್ಕರಿಸಿರುವ ರಾಜ್ಯಪಾಲರು, ನೂತನ ಸರ್ಕಾರ ರಚನೆಗೆ ಅವಕಾಶ ನೀಡಿದ್ದು, ಪ್ರಮಾಣ ವಚನ ಸ್ವೀಕರಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ.
ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆಶಿ ಆಯ್ಕೆ:

ರಾಜ್ಯಪಾಲರಿಗೆ ಖುದ್ದಾಗಿ ಭೇಟಿಯಾಗಿ ಸಲ್ಲಿಸಿರುವ ಪತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ತಾವು ಆಯ್ಕೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. 135 ಕಾಂಗ್ರೆಸ್ ಶಾಸಕರು, 2 ಅಂಗಸಂಸ್ಥೆ (Associated) ಸದಸ್ಯರು ಹಾಗೂ 1 ರೈತ ಸಂಘದ ಶಾಸಕರ ಬೆಂಬಲದೊಂದಿಗೆ ಮೇ 30ರಂದು ತಮ್ಮನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜೂನ್ 3ರಂದು ಲೋಕಭವನದಲ್ಲಿ ಪ್ರಮಾಣ ವಚನ:
ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, “ಬುಧವಾರ, ಜೂನ್ 3, 2026ರಂದು ಸಂಜೆ 4:05 ಗಂಟೆಗೆ ಬೆಂಗಳೂರಿನ ಲೋಕಭವನದಲ್ಲಿ ಮುಖ್ಯಮಂತ್ರಿಯಾಗಿ ತಮಗೆ ಹಾಗೂ ತಮ್ಮ ಸಚಿವ ಸಂಪುಟದ ಇತರ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲು ಸಮಯಾವಕಾಶ ಹಾಗೂ ಅನುಮತಿ ನೀಡಬೇಕು” ಎಂದು ಡಿ.ಕೆ. ಶಿವಕುಮಾರ್ ರಾಜ್ಯಪಾಲರಲ್ಲಿ ಮನವಿ ಮಾಡಿದ್ದರು.
ಸರ್ಕಾರ ರಚನೆಗೆ ರಾಜ್ಯಪಾಲರ ಅಧಿಕೃತ ಆಹ್ವಾನ:
ಡಿ.ಕೆ. ಶಿವಕುಮಾರ್ ಅವರ ಮನವಿ ಪತ್ರವನ್ನು ಸ್ವೀಕರಿಸಿ ತಕ್ಷಣವೇ ಸ್ಪಂದಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, “ಮೇ 30ರಂದು ಸರ್ಕಾರ ರಚನೆಗೆ ಹಕ್ಕು ಮಂಡಿಸಿ ನೀವು ನೀಡಿರುವ ಪತ್ರ ತಲುಪಿದೆ. ಜೂನ್ 3, 2026ರಂದು ಸಂಜೆ 04:05ಕ್ಕೆ ಲೋಕಭವನ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಹಾಗೂ ನಿಮ್ಮ ಸಚಿವ ಸಂಪುಟದ ಸದಸ್ಯರೊಂದಿಗೆ ಪ್ರಮಾಣ ವಚನ ಸ್ವೀಕರಿಸಲು ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ” ಎಂದು ಮರು ಪತ್ರ ಬರೆದು ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಅಧಿಕೃತ ಚಾಲನೆ ದೊರೆತಿದೆ.
ಇದಕ್ಕೂ ಮುನ್ನ, “ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಿಸಿದರು.
ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
“ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಿತು. ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಕಾಂಗ್ರೆಸ್ ಶಾಸಕಾಂಗ ಸಭೆಯು ಸರ್ವಾನುಮತದಿಂದ ಒಪ್ಪಿಕೊಂಡಿತು. ಡಾ.ಜಿ. ಪರಮೇಶ್ವರ ಅವರು ಈ ಪ್ರಸ್ತಾವನೆಯನ್ನು ಅನುಮೋದಿಸಿದರು” ಎಂದು ಮಾಹಿತಿ ನೀಡಿದರು.





















