ಬೆಂಗಳೂರು, ಜೂ.03 www.bengaluruwire.com: ಕರ್ನಾಟಕ ರಾಜಕಾರಣದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಂಗಳೂರಿನ ಲೋಕ ಭವನದ ಗ್ಲಾಸ್ ಹೌಸ್‌ನಲ್ಲಿ (ಗಾಜಿನ ಮನೆ) ಇಂದು ಸಂಜೆ 4 ಗಂಟೆ 05 ನಿಮಿಷಕ್ಕೆ ಪದಗ್ರಹಣ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ.
’ಡಿಕೆಶಿ’ ಎಂದೇ ಜನಪ್ರಿಯರಾಗಿರುವ 64 ವರ್ಷದ ಒಕ್ಕಲಿಗ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ (ಡಿಸಿಎಂ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 12 ಶಾಸಕರು:

ಡಿ.ಕೆ.ಶಿವಕುಮಾರ್ ಹಾಗೂ ಡಾ.ಜಿ.ಪರಮೇಶ್ವರ್ ಅವರ ಜೊತೆಗೆ ಇತರ 12 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರು ಈ ಪಟ್ಟಿಯನ್ನು ಈಗಾಗಲೇ ರಾಜ್ಯಪಾಲರಿಗೆ ರವಾನಿಸಿದ್ದಾರೆ.
ರಾಜ್ಯಪಾಲರಿಗೆ ಕಳುಹಿಸಿರುವ ಪಟ್ಟಿಯ ಪ್ರಕಾರ ಸಚಿವರಾಗಲಿರುವವರ ಅಧಿಕೃತ ವಿವರ ಇಲ್ಲಿದೆ:
ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ,ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್,ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್, ಡಾ.ಶರಣ್ ಪ್ರಕಾಶ್ ಪಾಟೀಲ್.
ಸಿದ್ದರಾಮಯ್ಯ ರಾಜೀನಾಮೆ ಮತ್ತು ಡಿಕೆಶಿ ಆಯ್ಕೆ
ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಂತೆ ಕಳೆದ ವಾರವಷ್ಟೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತದನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವೆ ನಡೆದ ಹಲವು ಸುತ್ತಿನ ಬಿರುಸಿನ ಚರ್ಚೆ ಹಾಗೂ ಸಮಾಲೋಚನೆಗಳ ಬಳಿಕ, ಮೇ 30ರಂದು ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.
ಡಿ.ಕೆ. ಶಿವಕುಮಾರ್‌ಗೆ ಶುಭ ಕೋರಿದ ಸೋನಿಯಾ ಗಾಂಧಿ:
ಇದೇ ವೇಳೆ, ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಬುಧವಾರ ದೂರವಾಣಿ ಕರೆ ಮಾಡಿ ವಿಶೇಷವಾಗಿ ಶುಭ ಹಾರೈಸಿದ್ದಾರೆ.
”ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ,” ಎಂದು ಸೋನಿಯಾ ಗಾಂಧಿ ಅವರು ತಮ್ಮ ಹಾರೈಕೆಯಲ್ಲಿ ತಿಳಿಸಿದ್ದಾರೆ.

















