ಬೆಂಗಳೂರು, ಜೂ.10 www.bengaluruwire: ಪ್ರಸಕ್ತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಿತಿಮೀರಿದ್ದು, ಇದನ್ನು ಸರಿದೂಗಿಸಲು ರಾಜ್ಯ ಸರ್ಕಾರ ಈಗಾಗಲೇ ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಿಸಲು ತೀರ್ಮಾನಿಸಿದೆ.
ಇದೇ ಮಾದರಿಯಲ್ಲಿ, ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನ್ರೇಗಾ) ಯ ಹೊಸ ರೂಪವಾದ ‘ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕಾ ಮಿಷನ್’ (GRAMG) ಅಡಿಯಲ್ಲೂ ಕನಿಷ್ಠ ವೇತನವನ್ನು ಹೆಚ್ಚಿಸಬೇಕು ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಎಲ್ಲ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರ ವಿಡಿಯೋ ಕಾನ್ಫರೆನ್ಸ್ (ವಿಸಿ) ಸಭೆಯಲ್ಲಿ ಪಾಲ್ಗೊಂಡು ಅವರು ಈ ಮಹತ್ವದ ಬೇಡಿಕೆ ಮುಂದಿಟ್ಟರು.
ಹೊಸ ಯೋಜನೆಯ ಅನುದಾನ ಹಂಚಿಕೆ ವಿವರ:

ಈ ವರ್ಷ ಜುಲೈ 1ರಿಂದ ಮನ್ರೇಗಾ ಯೋಜನೆಯು ‘ವಿಕಸಿತ್ ಭಾರತ್-ಜಿ ರಾಮ್ ಜಿ’ (GRAMG) ಹೆಸರಿನಲ್ಲಿ ಹೊಸದಾಗಿ ಜಾರಿಯಾಗಲಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, ಅನುದಾನ ಹಂಚಿಕೆಯ ವಿವರಗಳನ್ನು ಹಂಚಿಕೊಂಡರು.
ಈ ಯೋಜನೆಗಾಗಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 60:40ರ ಅನುಪಾತದಲ್ಲಿ 5,709.90 ಕೋಟಿ ರೂ. ಗಳ ಮಧ್ಯಂತರ ಹಂಚಿಕೆ ಮಾಡಿದೆ. ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರವು ಶೇ.40ರ ಅನುಪಾತದಡಿ 3,806.60 ಕೋಟಿ ರೂ. ಗಳನ್ನು ಭರಿಸಬೇಕಾಗಿದೆ.
ಈ ಯೋಜನೆ ಅನುಷ್ಠಾನಕ್ಕಾಗಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಗಳಿಗೆ ಶೀಘ್ರವೇ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಬಡವರ ಬದುಕು ಹಸನಾಗಿಸಲು ರಾಜ್ಯದ ಶ್ರಮ:
ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಗ್ರಾಮೀಣ ಭಾಗದ ಭೂರಹಿತ ಕೂಲಿ ಕಾರ್ಮಿಕರು, ಸಣ್ಣ ರೈತರು, ಮಹಿಳೆಯರು, ಪರಿಶಿಷ್ಟ ಜಾತಿ-ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರ ಬದುಕನ್ನು ಹಸನಾಗಿಸಲು ರಾಜ್ಯ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ದೆಹಲಿ ಸಭೆಯಲ್ಲಿ ರಾಜ್ಯದ ಧ್ವನಿ:
ಮುಂಬರುವ ಜೂನ್ 28 ಮತ್ತು 29ರಂದು ನವದೆಹಲಿಯಲ್ಲಿ ವಿಕಸಿತ್ ಭಾರತ್ ಜೀ ರಾಮ್ ಜೀ (GRAMG) ಯೋಜನೆಯ ಅನುಷ್ಠಾನ ಕುರಿತಂತೆ ಎಲ್ಲಾ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರ ಮಹತ್ವದ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಖುದ್ದಾಗಿ ಭಾಗವಹಿಸಿ, ರಾಜ್ಯದ ಸಮಗ್ರ ಬೇಡಿಕೆಗಳನ್ನು ಕೇಂದ್ರದ ಮುಂದಿಡುವುದಾಗಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.




















