ಬೆಂಗಳೂರು, ಜೂ.18 www.bengaluruwire.com: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು ಮತ್ತು ಪೊಲೀಸ್ ಅಧಿಕಾರಿಗಳಿಂದ ನಿರಂತರವಾಗಿ ನಡೆಯುತ್ತಿರುವ ಕಿರುಕುಳವನ್ನು ಖಂಡಿಸಿ ಹಾಗೂ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೇಕರಿ ಮಾಲೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಸಣ್ಣ ಉದ್ದಿಮೆದಾರರು ಭಾಗವಹಿಸಿ, ತಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
27 ಬೇಡಿಕೆಗಳ ಈಡೇರಿಕೆಗೆ ಆಗ್ರಹ:
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ರವಿಶೆಟ್ಟಿ ಬೈಂದೂರ್, “ಸಣ್ಣ ಉದ್ದಿಮೆದಾರರು ಮತ್ತು ಬೀದಿ ಬದಿ ವ್ಯಾಪಾರಿಗಳು ಇಂದು ತೀವ್ರ ಸಂಕಷ್ಟದಲ್ಲಿದ್ದಾರೆ. ನಮ್ಮ 27 ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಈಡೇರಿಸಬೇಕು. ಅಧಿಕಾರಿಗಳ ಕಿರುಕುಳಕ್ಕೆ ಕೂಡಲೇ ಕಡಿವಾಣ ಹಾಕಬೇಕು” ಎಂದು ಒತ್ತಾಯಿಸಿದರು.

ವ್ಯಾಪಾರಿಗಳ ಪ್ರಮುಖ ಸಮಸ್ಯೆಗಳು:
ಸಣ್ಣ ವ್ಯಾಪಾರಿಗಳ ಮೇಲೆ ಅಧಿಕಾರಿಗಳು ವಿಧಿಸುತ್ತಿರುವ ಅತಿಯಾದ ದಂಡದ ಹಾವಳಿ, ಪರವಾನಗಿ (ಲೈಸೆನ್ಸ್) ಪಡೆಯುವಲ್ಲಿ ಆಗುತ್ತಿರುವ ಅನಗತ್ಯ ಸಮಸ್ಯೆಗಳು, ಮತ್ತು ದಿನನಿತ್ಯದ ವ್ಯಾಪಾರಕ್ಕೆ ಅಡ್ಡಿಪಡಿಸಿ ಜೀವನೋಪಾಯಕ್ಕೆ ಧಕ್ಕೆ ತರುತ್ತಿರುವ ಅಧಿಕಾರಿಗಳ ವರ್ತನೆಯನ್ನು ಈ ವೇಳೆ ತೀವ್ರವಾಗಿ ಖಂಡಿಸಲಾಯಿತು. ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಈ ಶೋಷಣೆಗೆ ಮುಕ್ತಿ ನೀಡಬೇಕು ಎಂದು ಆಗ್ರಹಿಸಲಾಯಿತು.
ಈ ಬೃಹತ್ ಪ್ರತಿಭಟನಾ ಕಾರ್ಯಕ್ರಮದಲ್ಲಿ ಬೇಳೂರು ರಾಘವೇಂದ್ರ ಶೆಟ್ಟಿ, ಗಂಡಸಿ ಸದಾನಂದ ಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಪೂಜಾ ಶೆಟ್ಟಿ, ಸುರೇಂದ್ರ ಶೆಟ್ಟಿ ಸೇರಿದಂತೆ ಅನೇಕ ಬೇಕರಿ ಮಾಲೀಕರು ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.





















