ನವದೆಹಲಿ, ಜು.25 www.bengaluruwire.com: ಭಾರಿ ವಿವಾದಕ್ಕೆ ಕಾರಣವಾಗಿದ್ದ ನೀಟ್-ಯುಜಿ (NEET-UG) ಪರೀಕ್ಷೆಯ ಅಕ್ರಮ ಮತ್ತು ಅದರ ವಿರುದ್ಧ ನಡೆಯುತ್ತಿದ್ದ ಸರಣಿ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೊನೆಗೂ ಮಣಿದಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘವಾದ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಏನಿದೆ?:
ತಮ್ಮ ರಾಜೀನಾಮೆ ಪತ್ರದಲ್ಲಿ, ಧರ್ಮೇಂದ್ರ ಪ್ರಧಾನ್ ಅವರು ಕಳೆದ 4 ದಶಕಗಳಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ತಾವು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ. ಮೇ 3, 2026 ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳು ಬೆಳಕಿಗೆ ಬಂದ ತಕ್ಷಣ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿತು. ಕೂಡಲೇ ಸಿಬಿಐ ತನಿಖೆಗೆ ಆದೇಶಿಸಿ, ಮರುಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಯಿತು. 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಜೂನ್ 21, 2026 ರಂದು ಯಶಸ್ವಿಯಾಗಿ ಮರುಪರೀಕ್ಷೆ ನಡೆಸಲಾಯಿತು. ಜುಲೈ 16 ರಂದು ಪ್ರಕಟವಾದ ಫಲಿತಾಂಶ ತೃಪ್ತಿದಾಯಕವಾಗಿದ್ದು, ಬಡ ಹಿನ್ನೆಲೆಯ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ಸಿಕ್ಕಿದೆ ಎಂದು ಅವರು ವಿವರಿಸಿದ್ದಾರೆ.
“ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ”:

ಕೆಲವು ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಉದ್ದೇಶಪೂರ್ವಕವಾಗಿ ದಾರಿತಪ್ಪಿಸಲು ಪ್ರಯತ್ನಿಸುತ್ತಿರುವುದಕ್ಕೆ ಪ್ರಧಾನ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ 10 ದಿನಗಳಿಂದ ಜಂತರ್ ಮಂತರ್ ಮತ್ತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಬೆಳವಣಿಗೆಗಳು ತಮಗೆ ತೀವ್ರ ನೋವು ತಂದಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
”ಈ ಪ್ರಕ್ಷುಬ್ಧ ಪರಿಸ್ಥಿತಿಯ ಲಾಭವನ್ನು ರಾಷ್ಟ್ರ ವಿರೋಧಿ ಶಕ್ತಿಗಳು ಪಡೆಯಬಾರದು. ದೇಶದ ಒಗ್ಗಟ್ಟು ಕಾಪಾಡಬೇಕು ಹಾಗೂ ನಮ್ಮ ವಿದ್ಯಾರ್ಥಿಗಳ ಭವಿಷ್ಯ ಯಾವುದೇ ಕಾನೂನಿನ ತೊಡಕಿನಲ್ಲಿ ಸಿಲುಕಬಾರದು. ವಿದ್ಯಾರ್ಥಿಗಳು ತಮ್ಮ ಓದು ಮತ್ತು ಕರಿಯರ್ ಮೇಲೆ ಗಮನಹರಿಸಬೇಕು ಎಂಬ ಏಕೈಕ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಲ್ಲ,” ಎಂದು ಸ್ಪಷ್ಟಪಡಿಸಿರುವ ಅವರು, ತಮ್ಮ ಸ್ಥಾನವನ್ನು ತ್ಯಜಿಸುತ್ತಿರುವುದಾಗಿ ಘೋಷಿಸಿದ್ದಾರೆ.
ಕೊನೆಯದಾಗಿ, ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನಕ್ಕೆ ಕೃತಜ್ಞತೆ ಸಲ್ಲಿಸಿರುವ ಧರ್ಮೇಂದ್ರ ಪ್ರಧಾನ್, ಭವಿಷ್ಯದಲ್ಲೂ ಭಾರತ ಮಾತೆ, ಒಡಿಶಾದ ಜನತೆ ಹಾಗೂ ಯುವಕರ ಸೇವೆಗೆ ತಾವು ಸದಾ ಸಿದ್ಧನಿರುವುದಾಗಿ ತಿಳಿಸಿದ್ದಾರೆ.



















