ಬೆಂಗಳೂರು, ಜು.31 www.bengaluruwire.com: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
ಸಾರ್ವಜನಿಕರ ಹಾಗೂ ಅಭ್ಯರ್ಥಿಗಳ ನಿರಂತರ ಕೋರಿಕೆ ಮೇರೆಗೆ, ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 7ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿತ್ತು ಹಾಗೂ ಶುಲ್ಕ ಪಾವತಿಸಲು ಜುಲೈ 31 ಕಡೆಯ ದಿನವಾಗಿತ್ತು. ಆದರೆ ತಾಂತ್ರಿಕ ದೋಷಗಳು ಹಾಗೂ ಸಾರ್ವಜನಿಕರ ಮನವಿಯನ್ನು ಪುರಸ್ಕರಿಸಿರುವ ಪ್ರಾಧಿಕಾರವು, ಈಗ ಆಸಕ್ತ ಅಭ್ಯರ್ಥಿಗಳಿಗೆ ಆಗಸ್ಟ್ 7 ರವರೆಗೆ ಅರ್ಜಿ ಸಲ್ಲಿಸಲು ಮುಕ್ತ ಅವಕಾಶ ಕಲ್ಪಿಸಿದೆ. ಅದೇ ರೀತಿ, ಅರ್ಜಿ ಶುಲ್ಕವನ್ನು ಪಾವತಿಸಲು ಆಗಸ್ಟ್ 10 ಕೊನೆಯ ದಿನವಾಗಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಐಎಎಸ್ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವ ರಾಜ್ಯದ ಯುವಜನತೆಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಕೊನೆಯ ಕ್ಷಣದ ಸರ್ವರ್ ಸಮಸ್ಯೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಉಳಿದಂತೆ ಜುಲೈ 10ರ ಅಧಿಸೂಚನೆಯಲ್ಲಿದ್ದ ಇತರೆ ಯಾವುದೇ ನಿಯಮಗಳು ಮತ್ತು ಷರತ್ತುಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.






















